ಸವದತ್ತಿ : ನಗರದ ರೇಣುಕಾ ಚಿತ್ರಮಂದಿರದ ಬಳಿ ಕೈಗೆತ್ತಿಕೊಂಡಿರುವ ಚರಂಡಿ ಕಾಮಗಾರಿ ಕಳೆದ ಹಲವು ದಿನಗಳಿಂದ ಅರ್ಧಕ್ಕೆ ಸ್ಥಗಿತಗೊಂಡಿದ್ದು, ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ತೀವ್ರ ತೊಂದರೆಯುಂಟು ಮಾಡುತ್ತಿದೆ.
ನಗರದ ಈ ಮಾರ್ಗದಲ್ಲಿ ಪ್ರತಿದಿನ ಸಾವಿರಾರು ದ್ವಿಚಕ್ರ ವಾಹನಗಳು ಹಾಗೂ ಸಾರ್ವಜನಿಕರು ಓಡಾಡುತ್ತಾರೆ. ಆದರೆ, ಕಾಮಗಾರಿಯನ್ನು ಪೂರ್ಣಗೊಳಿಸದೇ ರಸ್ತೆಯ ಮಧ್ಯೆಯೇ ಮಣ್ಣು ಮತ್ತು ಜಲ್ಲಿಕಲ್ಲುಗಳನ್ನು ರಾಶಿ ಹಾಕಲಾಗಿದೆ. ಇದರಿಂದಾಗಿ ರಸ್ತೆಯು ಕಿರಿದಾಗಿದ್ದು, ಸಂಚಾರ ದಟ್ಟಣೆ ಉಂಟಾಗುತ್ತಿದೆ. ಅಲ್ಲದೆ, ಮಳೆಗಾಲ ಸಮೀಪಿಸುತ್ತಿದ್ದು, ತೆರೆದ ಚರಂಡಿಯಲ್ಲಿ ನೀರು ಸಂಗ್ರಹವಾಗಿ ದುರ್ವಾಸನೆ ಬೀರುವುದಲ್ಲದೆ, ಸೊಳ್ಳೆಗಳ ಕಾಟ ಹೆಚ್ಚಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ.
ಕಿರಿದಾದ ರಸ್ತೆಯಲ್ಲಿ ವಾಹನಗಳು ಸಂಚರಿಸುವಾಗ ನಿತ್ಯವೂ ಸಣ್ಣಪುಟ್ಟ ಅಪಘಾತಗಳು ನಡೆಯುತ್ತಿವೆ. ವೃದ್ಧರು ಮತ್ತು ಶಾಲಾ ಮಕ್ಕಳು ನಡೆದುಕೊಂಡು ಹೋಗುವುದಕ್ಕೂ ಸಹ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರ ನಿರ್ಲಕ್ಷ್ಯ ಮತ್ತು ಸಂಬಂಧಪಟ್ಟ ಅಧಿಕಾರಿಗಳ ಮೌನ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ, ಕೂಡಲೇ ಚರಂಡಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡುವ ಮೂಲಕ ಮುಂದಾಗುವ ಅನಾಹುತಗಳನ್ನು ತಪ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸ್ಥಳೀಯ ನಿವಾಸಿ ಮಲ್ಲಿಕಾರ್ಜುನ ಬೀಳಗಿ ಮಾತನಾಡಿ, ಹಲವು ತಿಂಗಳಿಂದ ಚರಂಡಿ ಕಾಮಗಾರಿ ಸ್ಥಗಿತಗೊಂಡಿದೆ. ಇದರಿಂದ ಸಾರ್ವಜನಿಕರು ಓಡಾಡಲು ಹರಸಾಹಸ ಪಡುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಬೇಕು ಎಂದರು.